
ಶಿವಮೊಗ್ಗ: ನಗರದ ಐತಿಹಾಸಿಕ ಹಾಗೂ ಪ್ರಸಿದ್ಧ ಗುಡ್ಡೇಕಲ್ಲು ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವರ ಜಾತ್ರಾ ಮಹೋತ್ಸವವು ಭಕ್ತಿಭಾವದಿಂದ ನಡೆಯುತ್ತಿದ್ದು ಜಾತ್ರೆಯ ಅಂಗವಾಗಿ ದೇವರಿಗೆ ವಿಶೇಷ ಅಲಂಕಾರ, ಪೂಜಾ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.

ಈ ಜಾತ್ರಾ ಮಹೋತ್ಸವಕ್ಕೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹಾಗೂ ಕೆ.ಇ. ಕಾಂತೇಶ್ ಅವರು ಕುಟುಂಬ ಸಮೇತರಾಗಿ ಆಗಮಿಸಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದರು. ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ದೇವರ ಆಶೀರ್ವಾದ ಪಡೆದುಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿಯ ಕೃಪೆಯಿಂದ ನಾಡಿನಲ್ಲಿ ಶಾಂತಿ, ಸೌಹಾರ್ದತೆ, ಉತ್ತಮ ಮಳೆ ಹಾಗೂ ಸಮೃದ್ಧಿ ನೆಲೆಸಲಿ. ಪ್ರತಿಯೊಬ್ಬರ ಜೀವನದಲ್ಲಿ ಸುಖ, ಸಂತೋಷ ಹಾಗೂ ನೆಮ್ಮದಿ ದೊರೆಯಲಿ ಎಂದು ಪ್ರಾರ್ಥಿಸಿದರು.

ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ದೇವಸ್ಥಾನಕ್ಕೆ ಭಕ್ತರ ದಂಡೇ ಹರಿದುಬಂದಿತ್ತು. ವಿವಿಧೆಡೆಯಿಂದ ಆಗಮಿಸಿದ್ದ ಭಕ್ತರು ಕಾವಡಿ ಹೊತ್ತು, ಭಕ್ತಿಗೀತೆ ಹಾಗೂ ಜಯಘೋಷಗಳೊಂದಿಗೆ ದೇವರ ದರ್ಶನ ಪಡೆದುಕೊಂಡರು. ದೇವಸ್ಥಾನದ ಆವರಣದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.
ಈ ಸಂದರ್ಭದಲ್ಲಿ ಈಶ್ವರಪ್ಪ ಹಾಗೂ ಕಾಂತೇಶ್ ಅವರ ಕುಟುಂಬದ ಸದಸ್ಯರು, ದೇವಸ್ಥಾನದ ಆಡಳಿತ ಮಂಡಳಿ, ಪ್ರಮುಖರು ಹಾಗೂ ಅಪಾರ ಸಂಖ್ಯೆಯ ಭಕ್ತರು ಉಪಸ್ಥಿತರಿದ್ದರು.