
ಶಿವಮೊಗ್ಗ: 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಆಗಸ್ಟ್ 15ರಂದು ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.

ಆಗಸ್ಟ್ 15, 2026ರಂದು ಬೆಳಗ್ಗೆ 10 ಗಂಟೆಯಿಂದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ರಕ್ತದಾನ ಶಿಬಿರ ನಡೆಯಲಿದೆ. ‘ರಕ್ತದಾನವೇ ನಿಜವಾದ ಮಾನವೀಯ ಸೇವೆ’ ಎಂಬ ಸಂದೇಶದೊಂದಿಗೆ ಆಯೋಜಿಸಿರುವ ಈ ಶಿಬಿರದಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಅವರ ಕುಟುಂಬಸ್ಥರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳು ನಿಖಿಲ್ ಬಿ ರವರು ಮನವಿ ಮಾಡಿದ್ದಾರೆ

ರಕ್ತದಾನ ಮಾಡುವ ಮೂಲಕ ಅಗತ್ಯವಿರುವವರಿಗೆ ನೆರವಾಗುವುದರ ಜೊತೆಗೆ ಸಮಾಜದಲ್ಲಿ ಮಾನವೀಯತೆ ಹಾಗೂ ಸೇವಾ ಮನೋಭಾವವನ್ನು ಬೆಳೆಸುವ ಉದ್ದೇಶದಿಂದ ಶಿಬಿರ ಆಯೋಜಿಸಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರತಿಯೊಬ್ಬರೂ ಈ ಮಹತ್ವದ ಸೇವಾ ಕಾರ್ಯದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕೋರಲಾಗಿದೆ.