ಶಿವಮೊಗ್ಗ: ಕಳಂಕದ ಆರೋಪ ಹೊತ್ತಿರುವ ಸಚಿವ ಬಿ.ನಾಗೇಂದ್ರ ಅವರ ಪದಚ್ಯುತಿಗೆ ಆಗ್ರಹಿಸಿ ಭಾರತೀಯ ಜನತಾ ಪಕ್ಷ ಆ17ರಿಂದ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಎದುರು ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದೆ ಎಂದು ಬಿಜೆಪಿಯ ಶಿವಮೊಗ್ಗ ವಿಭಾಗ ಪ್ರಭಾರಿ, ಮಾಜಿ ಶಾಸಕ ಆರ್.ಕೆ.ಸಿದ್ರಾಮಣ್ಣ ತಿಳಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಇದೇ ಬಿ.ನಾಗೇಂದ್ರ ಅವರ ಮೌಖಿಕ ಆದೇಶದ ಮೇರೆಗೆ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಅವ್ಯವಹಾರ ನಡೆದಿದೆ ಎನ್ನಲಾಗಿದ್ದು ಅದರಲ್ಲಿ ನಾಗೇಂದ್ರ ಅವರು 88 ಕೋಟಿ ರೂ.ಗಳನ್ನು ತಮ್ಮ ಸ್ವಂತಕ್ಕೆ ಬಳಸಿದ್ದರ ಬಗ್ಗೆ ತನಿಖೆಯಿಂದ ಬೆಳಕಿಗೆ ಬಂದಿದೆ. ಅಲ್ಲದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳ ಅಮಾನತು ಸೇರಿದಂತೆ ನಾಗೇಂದ್ರ ಅವರೇ ರಾಜೀನಾಮೆ ನೀಡಿದ್ದರು ಎಂದರು.

ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಪರಿಶಿಷ್ಟ ಪಂಗಡಕ್ಕೆ ಮೀಸಲಿದ್ದ 187 ಕೋಟಿ ರೂ.ಗಳನ್ನು ಸಚಿವ ಬಿ.ನಾಗೇಂದ್ರ ಅವರ ಮೌಖಿಕ ಆದೇಶದ ಮೇಲೆ ಅಧಿಕಾರಿಗಳು ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ ಎಂದು ಆ ನಿಗಮದ ಅಧಿಕಾರಿಯಾಗಿದ್ದ ಚಂದ್ರಶೇಖರ್ ತಾನು ಶಿವಮೊಗ್ಗದಲ್ಲಿ ಆತ್ಮ ಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ತನ್ನ ಡೆಥ್ ನೋಟ್ ನಲ್ಲಿ ಬರೆದಿಟ್ಟಿದ್ದರು ಎಂದ ಅವರು ಮೃತರ ಕುಟುಂಬಕ್ಕೆ ಸರ್ಕಾರದಿಂದ ಸಿಗಬೇಕಾದ ಪರಿಹಾರ ಇನ್ನೂ ದೊರಕಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಒಂದು ವೇಳೆ ತಮಗೆ ಸಚಿವ ಸ್ಥಾನ ನೀಡದಿದ್ದರೆ ವಾಲ್ಮೀಕಿ ಹಗರಣದ ವಿವರಗಳನ್ನು ಬಯಲಿಗೆ ಎಳೆಯುತ್ತೇನೆ ಎಂದು ಬಿ.ನಾಗೇಂದ್ರ ಕಾಂಗ್ರೆಸ್ ಹೈ ಕಮಾಂಡ್ ಗೆ ಬ್ಲಾಕ್ ಮೇಲ್ ಮಾಡಿದ್ರಾ? ಅದಕ್ಕೆ ಹೆದರಿ ಕಳಂಕಿತ ಆರೋಪ ಹೊತ್ತಿರುವ ನಾಗೇಂದ್ರಗೆ ಸಚಿವ ಸ್ಥಾನ ನೀಡಿದ್ರಾ ಎಂದು ಪ್ರಶ್ನಿಸಿದ ಅವರು ಈ ಗಂಭೀರ ಪ್ರಕರಣವನ್ನು ಮುಚ್ಚಿಹಾಕಲು ಕಾಂಗ್ರೆಸ್ ಹೈ ಕಮಾಂಡ್ ನಾಗೇಂದ್ರಗೆ ಸಚಿವ ಸ್ಥಾನ ನೀಡಿದೆ ಎಂದು ಆಪಾದಿಸಿದರು.

ರಾಜ್ಯ ಕಾಂಗ್ರೆಸ್ ನಲ್ಲಿ ಅತೃಪ್ತಿಯ ಹೊಗೆ ಆಡುತ್ತಿದೆ. ಡಿ.ಕೆ.ಶಿವಕುಮಾರ್ ಅವರು ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಎರಡು ತಿಂಗಳಾದವು. ಅಂತೂ ಇಂತೂ ಎರಡು ತಿಂಗಳಾದ ಬಳಿಕ ಪೂರ್ಣ ಪ್ರಮಾಣದ ಮಂತ್ರಿ ಮಂಡಳ ರಚನೆ ಆಗಿದೆ. ಖಾತೆಯೂ ಹಂಚಿಕೆ ಆಗಿದೆ. ಆದರೆ ರಾಜಕೀಯದಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡಬೇಕು ಎಂದು ಚರ್ಚೆಯಾಗುತ್ತಿರುವ ಸಂದರ್ಭದಲ್ಲಿಯೇ ಡಿಕೆ.ಶಿ ಮಂತ್ರಿಮಂಡಲದಲ್ಲಿ ಯಾವೊಬ್ಬ ಮಹಿಳೆಗೂ ಸಚಿವ ಸ್ಥಾನ ನೀಡದೇ ಇರುವುದು ಮಹಿಳೆಯರಿಗೆ ಕಾಂಗ್ರೆಸ್ ಎಷ್ಟು ಅಗೌರವ ತೋರಿಸುತ್ತಿದೆ ಎಂಬುದನ್ನು ಸಾಬೀತು ಮಾಡಿದೆ ಎಂದು ವ್ಯಂಗ್ಯವಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್, ಪ್ರಮುಖರಾದ ಹರಿಕೃಷ್ಣ, ಮೋಹನ ರೆಡ್ಡಿ, ಸುರೇಖಾ ಮುರಳೀಧರ, ಹರೀಶ್, ಚಂದ್ರಶೇಖರ್, ಮಂಜುನಾಥ್ ಮೊದಲಾದವರಿದ್ದರು.