ಶಿವಮೊಗ್ಗ,ಆ.21: ನಗರದ ಕಾಲೇಜೊಂದರ ಪ್ರಾಂಶುಪಾಲರ ವಿರುದ್ಧ ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಗಂಭೀರ ಆರೋಪ ಕೇಳಿಬಂದಿದ್ದು, ಕೋಟೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಹಾಗೂ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ.
ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ 17 ವರ್ಷದ ವಿದ್ಯಾರ್ಥಿನಿ ನೀಡಿರುವ ದೂರಿನ ಆಧಾರದ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಜುಲೈ 18 ಹಾಗೂ 20ರಂದು ವಿದ್ಯಾರ್ಥಿನಿ ಕಾಲೇಜಿಗೆ ಗೈರಾಗಿದ್ದರು. ಜುಲೈ 21ರಂದು ಅವರು ಕಾಲೇಜಿಗೆ ತೆರಳಿದಾಗ, ಪ್ರಾಂಶುಪಾಲರು ಆಕೆಯೊಂದಿಗೆ ಹಾಗೂ ಇತರೆ ಕೆಲವು ವಿದ್ಯಾರ್ಥಿನಿಯರೊಂದಿಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ತರಗತಿಯಲ್ಲಿ ಎಲ್ಲ ವಿದ್ಯಾರ್ಥಿಗಳ ಎದುರಲ್ಲೇ ಮುಜುಗರ ಉಂಟಾಗುವಂತೆ ನಿಂದಿಸಿ, ವೈಯಕ್ತಿಕ ವಿಚಾರಗಳನ್ನು ಪ್ರಸ್ತಾಪಿಸಿ ಆಕ್ಷೇಪಾರ್ಹವಾಗಿ ಮಾತನಾಡಿದ್ದಾರೆ ಎನ್ನಲಾಗಿದೆ.
ಅಷ್ಟೇ ಅಲ್ಲದೆ, ಪ್ರಾಂಶುಪಾಲರು ವಿದ್ಯಾರ್ಥಿನಿಗೆ ಕೈಕುಲುಕುವುದು, ಹೆಗಲ ಮೇಲೆ ಕೈ ಹಾಕುವುದು ಹಾಗೂ ಸೊಂಟಕ್ಕೆ ಕೈ ಹಾಕುವುದು ಸೇರಿದಂತೆ ಅನುಚಿತವಾಗಿ ವರ್ತಿಸುತ್ತಿದ್ದರು ಎಂದು ವಿದ್ಯಾರ್ಥಿನಿ ದೂರಿನಲ್ಲಿ ಆರೋಪಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ವಿದ್ಯಾರ್ಥಿನಿಯಿಂದ ಅಧಿಕೃತ ಹೇಳಿಕೆ ಪಡೆದುಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ಘಟನೆ ಬೆನ್ನಲ್ಲೇ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿಯ ಅಧಿಕಾರಿಗಳು ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಕಾಲೇಜು ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿ, ಆರೋಪಿ ಪ್ರಾಂಶುಪಾಲರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.

ದಲಿತ ಸಂಘರ್ಷ ಸಮಿತಿ ವತಿಯಿಂದಲೂ ಈ ಸಂಬಂಧ ಪೊಲೀಸರಿಗೆ ದೂರು ಸಲ್ಲಿಕೆಯಾಗಿದ್ದು, ಆರೋಪಿ ಪ್ರಾಂಶುಪಾಲನನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸಿ, ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಲಾಗಿದೆ.