ಶಿವಮೊಗ್ಗ: ಸುಮಾರು 12 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸರು ಪತ್ತೆಹಚ್ಚಿ ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
ಬಂಧಿತ ಆರೋಪಿಯನ್ನು ತರೀಕೆರೆಯ ಮಲ್ಲೇಶ್ ಎಂದು ಗುರುತಿಸಲಾಗಿದೆ.
ಕುರಿ ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಲ್ಲೇಶ್

ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಗುನ್ನೆ ನಂ.48/2014, ಕಲಂ 390 ಐಪಿಸಿ ಅಡಿಯಲ್ಲಿ ಕುರಿ ಕಳ್ಳತನಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಲ್ಲೇಶ್ ಆರೋಪಿಯಾಗಿದ್ದ. ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಶಿಕಾರಿಪುರದ ಘನ ಎರಡನೇ ಹೆಚ್ಚುವರಿ ಮತ್ತು ಜೆಎಂಎಫ್ಸಿ ನ್ಯಾಯಾಲಯವು ಸಿ.ಸಿ. ನಂ.605/2023ರಲ್ಲಿ ಆರೋಪಿಯ ವಿರುದ್ಧ ದಸ್ತಗಿರಿ ವಾರೆಂಟ್ ಹೊರಡಿಸಿತ್ತು.

ಕಾರ್ಯಾಚರಣೆ ನಡೆಸಿದ ಪೊಲೀಸ್ ತಂಡ
ನ್ಯಾಯಾಲಯದ ದಸ್ತಗಿರಿ ವಾರೆಂಟ್ ಜಾರಿಗೊಳಿಸುವ ಹಿನ್ನೆಲೆಯಲ್ಲಿ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಐ ಹಾಗೂ ಸಿಬ್ಬಂದಿಯ ತಂಡ ಕಾರ್ಯಾಚರಣೆ ನಡೆಸಿ, ಹಲವು ವರ್ಷಗಳಿಂದ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಮಲ್ಲೇಶ್ನನ್ನು ಪತ್ತೆಹಚ್ಚಿ ಬಂಧಿಸಿದೆ.
ಬಂಧಿತ ಆರೋಪಿಯನ್ನು ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯದ ಆದೇಶದಂತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸುಮಾರು 12 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಗೈರಾಗಿದ್ದ ವಾರೆಂಟ್ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಐ ಹಾಗೂ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.