ಶಿವಮೊಗ್ಗ: SIR ಬಳಿಕ ಮತದಾರರ ಪಟ್ಟಿಯ ಪರಿಷ್ಕರಣೆ ಹಾಗೂ ಪರಿಶೀಲನೆಗೆ ಒತ್ತು ನೀಡುವ ನಿಟ್ಟಿನಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ನೇತೃತ್ವದಲ್ಲಿ ಕೆ.ಇ. ಕಾಂತೇಶ್ ಟೀಂ ರಾಷ್ಟ್ರಭಕ್ತ ಬಳಗದ ವತಿಯಿಂದ ಮನೆ–ಮನೆಗೆ ತೆರಳಿ ಮತದಾರರ ಪಟ್ಟಿ ಪರಿಶೀಲಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ನಗರದ ವಿನೋಬನಗರ ಪೊಲೀಸ್ ಚೌಕಿ ವೃತ್ತದ ಸಮೀಪದ ಚೇತನ ಶಾಲೆ ಪಾರ್ಕ್ ಬಳಿ, ವಾರ್ಡ್ ನಂ.08ರ ಬೂತ್ ನಂ.41ರಲ್ಲಿ ಕಾರ್ಯಕ್ರಮದ ಉದ್ಘಾಟನೆ ನಡೆಯಿತು.

ಈ ಸಂದರ್ಭದಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು, ವಿಳಾಸ ಸೇರಿದಂತೆ ವಿವರಗಳು ಸರಿಯಾಗಿವೆಯೇ ಎಂಬುದನ್ನು ಪರಿಶೀಲಿಸುವುದು, ಅರ್ಹ ಮತದಾರರ ಹೆಸರು ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳುವುದು ಹಾಗೂ ಅಗತ್ಯ ತಿದ್ದುಪಡಿಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವ ಕಾರ್ಯಕ್ಕೆ ಆದ್ಯತೆ ನೀಡಲಾಯಿತು.

ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ಮಾರ್ಗದರ್ಶನದಲ್ಲಿ ರಾಷ್ಟ್ರಭಕ್ತ ಬಳಗದ ಕಾರ್ಯಕರ್ತರು ಬೂತ್ ವ್ಯಾಪ್ತಿಯ ಮನೆಗಳಿಗೆ ತೆರಳಿ ಮತದಾರರನ್ನು ಭೇಟಿ ಮಾಡಿ, SIR ಬಳಿಕದ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜಾಗೃತಿ ಮೂಡಿಸಿದರು.

ಅರ್ಹ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು. ಯಾವುದೇ ಲೋಪದೋಷ ಕಂಡುಬಂದಲ್ಲಿ ಸಂಬಂಧಿಸಿದ ನಿಯಮಾನುಸಾರ ತಿದ್ದುಪಡಿ ಮಾಡಿಸಿಕೊಳ್ಳುವಂತೆ ಸಾರ್ವಜನಿಕರಿಗೆ ತಿಳಿಸಲಾಯಿತು.
ವಾರ್ಡ್ 08ರ ಬೂತ್ ನಂ.41ರಲ್ಲಿ ಆರಂಭಗೊಂಡಿರುವ ಈ ಅಭಿಯಾನವನ್ನು ಮುಂದಿನ ದಿನಗಳಲ್ಲಿ ವಿವಿಧ ಬೂತ್ಗಳಲ್ಲಿಯೂ ಮುಂದುವರಿಸುವ ಉದ್ದೇಶ ಹೊಂದಲಾಗಿದೆ ಎಂದು ರಾಷ್ಟ್ರಭಕ್ತ ಬಳಗದ ಮುಖಂಡರು ತಿಳಿಸಿದರು.