ಶಿವಮೊಗ್ಗ: ರೌಡಿಶೀಟರ್ ಕುಳ್ಳಿ ಕಿರಣ್ ಕೊಲೆ ಪ್ರಕರಣದಲ್ಲಿ ಪೊಲೀಸರ ಕಾರ್ಯಾಚರಣೆ ಮತ್ತಷ್ಟು ತೀವ್ರಗೊಂಡಿದ್ದು, ಪ್ರಮುಖ ಆರೋಪಿ ಉಮೇಶ್ ನಾಯ್ಕ್ನನ್ನು ಬಂಧಿಸುವ ವೇಳೆ ಆತ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾದ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಆತನ ಕಾಲಿಗೆ ಗುಂಡು ಹಾರಿಸಿರುವ ಘಟನೆ ಲಿಂಗಾಪುರ ಗ್ರಾಮದಲ್ಲಿ ನಡೆದಿದೆ.

ಕುಳ್ಳಿ ಕಿರಣ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರು, ಶಿವಮೊಗ್ಗ ತಾಲೂಕಿನ ಎನ್.ಆರ್.ಪುರ ರಸ್ತೆಯ ಲಿಂಗಾಪುರ ಗ್ರಾಮದಲ್ಲಿ ಆರೋಪಿ ಉಮೇಶ್ ನಾಯ್ಕ್ ಇರುವ ಬಗ್ಗೆ ಮಾಹಿತಿ ಪಡೆದು ಬಂಧನಕ್ಕೆ ತೆರಳಿದ್ದರು. ಈ ವೇಳೆ ಆರೋಪಿ ಪೊಲೀಸರನ್ನು ಕಂಡು ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ ಎನ್ನಲಾಗಿದೆ.

ಬಂಧಿಸಲು ಮುಂದಾದ ಪೊಲೀಸ್ ಸಿಬ್ಬಂದಿ ತಮ್ಮಣ್ಣ ಜಂಬಗಿ ಅವರ ಮೇಲೆ ಆರೋಪಿ ದಾಳಿ ನಡೆಸಲು ಮುಂದಾದಾಗ, ಶರಣಾಗುವಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಆದರೆ ಎಚ್ಚರಿಕೆಯನ್ನು ನಿರ್ಲಕ್ಷಿಸಿ ಹಲ್ಲೆಗೆ ಮುಂದಾದ ಹಿನ್ನೆಲೆಯಲ್ಲಿ ತುಂಗಾನಗರ ಸರ್ಕಲ್ ಇನ್ಸ್ಪೆಕ್ಟರ್ ಗುರುರಾಜ್ ಅವರು ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಗುಂಡೇಟಿನಿಂದ ಗಾಯಗೊಂಡ ಉಮೇಶ್ ನಾಯ್ಕ್ ಹಾಗೂ ಹಲ್ಲೆಯಿಂದ ಗಾಯಗೊಂಡ ಪೊಲೀಸ್ ಸಿಬ್ಬಂದಿ ತಮ್ಮಣ್ಣ ಜಂಬಗಿ ಅವರನ್ನು ತಕ್ಷಣ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಅವರು ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಪೊಲೀಸ್ ಅಧಿಕಾರಿಗಳಿಂದ ಪ್ರಕರಣದ ಕುರಿತು ಮಾಹಿತಿ ಪಡೆದು ತನಿಖೆಯ ಮುಂದಿನ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.
ಕುಳ್ಳಿ ಕಿರಣ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯ ಬಂಧನವಾಗಿರುವ ಹಿನ್ನೆಲೆಯಲ್ಲಿ ತನಿಖೆಗೆ ಮಹತ್ವದ ಮುನ್ನಡೆ ಸಿಕ್ಕಿದೆ. ಪ್ರಕರಣದ ಕೊಲೆಯ ಹಿಂದಿನ ನಿಖರ ಕಾರಣ, ಇತರ ಆರೋಪಿಗಳ ಪಾತ್ರ ಸೇರಿದಂತೆ ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.