ಶಿವಮೊಗ್ಗ, ಸೆ,17
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕದ ವತಿಯಿಂದ ಅಂತಾರಾಷ್ಟ್ರೀಯ ಯುವ ದಿನಾಚರಣೆಯ ಪ್ರಯುಕ್ತ ‘ಯುವಜನೋತ್ಸವ’ ಕಾರ್ಯಕ್ರಮದಡಿ ಸೆಪ್ಟೆಂಬರ್ 18 ರಂದು ಬೆಳಿಗ್ಗೆ 7 ಗಂಟೆಗೆ ಕಾಲೇಜು ವಿದ್ಯಾರ್ಥಿಗಳಿಗಾಗಿ ಜಿಲ್ಲಾಮಟ್ಟದ ಮ್ಯಾರಾಥಾನ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಎಚ್.ಐ.ವಿ/ಏಡ್ಸ್ ಕುರಿತು ಅರಿವು ಮೂಡಿಸುವುದು, ಸೇವಾ ಸೌಲಭ್ಯಗಳ ಮಾಹಿತಿ, ಕಳಂಕ ಮತ್ತು ತಾರತಮ್ಯ ತಡೆಗಟ್ಟುವುದು, ಎಚ್.ಐ.ವಿ/ಏಡ್ಸ್ (ತಡೆ) ಕಾಯ್ದೆ 2017, ಉಚಿತ ರಾಷ್ಟ್ರೀಯ ಸಹಾಯವಾಣಿ 1097 ಹಾಗೂ ರಕ್ತದಾನದ ಮಹತ್ವದ ಬಗ್ಗೆ 17 ರಿಂದ 25 ವರ್ಷ ವಯಸ್ಸಿನ ಕಾಲೇಜು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಈ ಮ್ಯಾರಾಥಾನ್ ಓಟವು ನಗರದ ನೆಹರೂ ಕ್ರೀಡಾಂಗಣದಿಂದ ಪ್ರಾರಂಭವಾಗಿ ಜೈಲ್ ಸರ್ಕಲ್, ಗೋಪಿ ಸರ್ಕಲ್, ಅಮೀರ್ ಅಹಮದ್ ಸರ್ಕಲ್ ಮಾರ್ಗವಾಗಿ ವೀರಭದ್ರ ಟಾಕೀಸ್ ಮುಖಾಂತರ ಸಾಗಿ ಮರಳಿ ನೆಹರೂ ಕ್ರೀಡಾಂಗಣದಲ್ಲಿ ಮುಕ್ತಾಯಗೊಳ್ಳಲಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕದ ಕಾರ್ಯಕ್ರಮಾಧಿಕಾರಿಗಳು ತಿಳಿಸಿದ್ದಾರೆ.