ಭದ್ರಾವತಿ: 11 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ 49 ವರ್ಷದ ವ್ಯಕ್ತಿಗೆ ನ್ಯಾಯಾಲಯವು 5 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹15 ಸಾವಿರ ದಂಡ ವಿಧಿಸಿದೆ.

ಭದ್ರಾವತಿ ಪೇಪರ್ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2024ರಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಭದ್ರಾವತಿ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ಆರೋಪಿಯನ್ನು ದೋಷಿ ಎಂದು ತೀರ್ಮಾನಿಸಿ ಶಿಕ್ಷೆ ವಿಧಿಸಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶ್ರೀ ಶ್ರೀಧರ್ ಅವರು ವಾದ ಮಂಡಿಸಿದ್ದರು.

ಪ್ರಕರಣದಲ್ಲಿ ಪೋಕ್ಸೋ ಕಾಯ್ದೆಯಡಿ ಆರೋಪಿಗೆ 5 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹15 ಸಾವಿರ ದಂಡ ವಿಧಿಸಲಾಗಿದ್ದು, ದಂಡದ ಮೊತ್ತದಲ್ಲಿ ₹10 ಸಾವಿರವನ್ನು ಸಂತ್ರಸ್ತ ಬಾಲಕಿಗೆ ಪರಿಹಾರವಾಗಿ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.