72-year old elephant
ಶಿವಮೊಗ್ಗ, ಸೆ.೨೪: ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದ ಜಿಲ್ಲೆಯ ಸಕ್ರೆಬೈಲು ಆನೆ ಬಿಡಾರವನ್ನು ಸೆ.೨೬ರಿಂದ ಸಾರ್ವಜನಿಕರ ಪ್ರವೇಶಕ್ಕೆ ಪುನರಾರಂಭಿಸಲಾಗುವುದು.

ಏ.೧೮ರಂದು ದುಬಾರೆ ಆನೆ ಶಿಬಿರದಲ್ಲಿ ಸಂಭವಿಸಿದ ಆಕಸ್ಮಿಕ ದುರ್ಘಟನೆಯಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲ ಆನೆ ಶಿಬಿರಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡುವಂತೆ ಅರಣ್ಯ ಸಚಿವರು ಸೂಚಿಸಿದ್ದರು. ಪ್ರವಾಸಿಗರ ಸುರಕ್ಷತೆಗಾಗಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳು ಹಾಗೂ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಅಳವಡಿಸಿಕೊಂಡ ಬಳಿಕ ಶಿಬಿರಗಳನ್ನು ಪುನರಾರಂಭಿಸುವಂತೆ ನಿರ್ದೇಶಿಸಲಾಗಿತ್ತು.

ಅದರಂತೆ ಸಕ್ರೆಬೈಲು ಆನೆ ಬಿಡಾರದಲ್ಲಿ ಅರಣ್ಯ ಇಲಾಖೆ ಸೂಚಿಸಿರುವ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರು ಹಾಗೂ ಆನೆಗಳಿಗೆ ಪ್ರತ್ಯೇಕ ಮಾರ್ಗಗಳನ್ನು ಗುರುತಿಸಲಾಗಿದ್ದು, ಆನೆಗಳು ಮತ್ತು ಪ್ರವಾಸಿಗರ ನಡುವೆ ನೇರ ಸಂಪರ್ಕವಾಗದಂತೆ ಅಗತ್ಯ ಸುರಕ್ಷತಾ ವ್ಯವಸ್ಥೆ ಮಾಡಲಾಗಿದೆ

.
ಇದಲ್ಲದೆ, ಪ್ರವಾಸಿಗರಿಗೆ ಮಾಹಿತಿ ಹಾಗೂ ಜಾಗೃತಿ ಮೂಡಿಸುವ ಉದ್ದೇಶದಿಂದ ವಿವಿಧ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ. ಅಗತ್ಯ ಸುರಕ್ಷತಾ ಕ್ರಮಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಸೆ.೨೬ರಿಂದ ಸಕ್ರೆಬೈಲು ಆನೆ ಬಿಡಾರವನ್ನು ಸಾರ್ವಜನಿಕರ ಪ್ರವೇಶಕ್ಕೆ ಅಧಿಕೃತವಾಗಿ ತೆರೆಯಲಾಗುವುದು ಎಂದು ಅರಣ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.