ಶಿವಮೊಗ್ಗ, ಸೆ.24: ಶಾಲಾ ಕಟ್ಟಡಕ್ಕೆ ಅಗ್ನಿ ಸುರಕ್ಷತಾ ಪ್ರಮಾಣಪತ್ರ (Fire Safety Clearance Certificate) ನೀಡಲು ₹1 ಲಕ್ಷ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಶಿವಮೊಗ್ಗ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಅಶೋಕ್ ಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಬಲೆಗೆ ಕೆಡವಿದ್ದಾರೆ.

ಶಿಕಾರಿಪುರ ಪಟ್ಟಣದ ನಂದಗೋಕುಲ ಪ್ರಿ-ಸ್ಕೂಲ್ನ ನೂತನ ಕಟ್ಟಡಕ್ಕೆ ಅಗ್ನಿ ಸುರಕ್ಷತಾ ಪ್ರಮಾಣಪತ್ರ ನೀಡಲು ಅಶೋಕ್ ಕುಮಾರ್ ಅವರು ₹1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ. ದೂರು ಆಧರಿಸಿ ಬಲೆ ಬೀಸಿದ ಲೋಕಾಯುಕ್ತ ತಂಡ, ಶಿವಮೊಗ್ಗದ ಸಾಗರ ರಸ್ತೆಯ ಜಿಲ್ಲಾ ಅಗ್ನಿಶಾಮಕ ಠಾಣೆಯ ಕಚೇರಿಯಲ್ಲಿ ಹಣ ಸ್ವೀಕರಿಸುತ್ತಿದ್ದ ವೇಳೆ ಅಧಿಕಾರಿಯನ್ನು ವಶಕ್ಕೆ ಪಡೆದಿದೆ.

ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ್ ಬಿ.ಪಿ. ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಪೊಲೀಸ್ ಇನ್ಸ್ಪೆಕ್ಟರ್ಗಳಾದ ವೀರಬಸಪ್ಪ ಹಾಗೂ ರುದ್ರೇಶ್ ಸೇರಿದಂತೆ ಸಿಬ್ಬಂದಿ ಭಾಗವಹಿಸಿದ್ದರು. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.