ಶಿವಮೊಗ್ಗ: ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ನ್ಯಾಯಾಲಯ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹2.24 ಲಕ್ಷ ದಂಡ ವಿಧಿಸಿದೆ.

ಆಗುಂಬೆ ಠಾಣೆ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದ ಜ್ಯೋತಿ (24) ಅವರು 2021ರ ಮೇ 23ರಂದು ಮೃತಪಟ್ಟಿದ್ದರು. ಪ್ರಕರಣದಲ್ಲಿ ಜ್ಯೋತಿಯ ಪತಿ ದಯಾನಂದ (37) ಹಾಗೂ ಅತ್ತೆ ಸುಮಿತ್ರಾ (65) ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪದಡಿ ಪ್ರಕರಣ ದಾಖಲಾಗಿತ್ತು.

ಜ್ಯೋತಿ ಸಾವಿನ ಕುರಿತು ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 51/2021ರಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಯನ್ನು ದೋಷಿ ಎಂದು ತೀರ್ಮಾನಿಸಿ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹2,24,000 ದಂಡ ವಿಧಿಸಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 2 ವರ್ಷಗಳ ಕಾರಾಗೃಹ ಶಿಕ್ಷೆ ಅನುಭವಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ.