ಶಿವಮೊಗ್ಗ: ಮನೆ ಕಳ್ಳತನ ಪ್ರಕರಣವನ್ನು ಭೇದಿಸಿರುವ ಕೋಟೆ ಠಾಣೆ ಪೊಲೀಸರು, ಖದೀಮರ ಜಾಲದ ಬೆನ್ನುಹತ್ತಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ₹1,02,77,435 ಮೌಲ್ಯದ ಕಳವು ಮಾಲನ್ನು ವಶಪಡಿಸಿಕೊಂಡಿದ್ದಾರೆ.

ಆ.28ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಯೊಂದರ ಬೀಗ ಮುರಿದು ಒಳನುಗ್ಗಿದ್ದ ಕಳ್ಳರು, ಚಿನ್ನಾಭರಣ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದ್ದರು. ಘಟನೆಗೆ ಸಂಬಂಧಿಸಿದಂತೆ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತನಿಖೆ ಚುರುಕುಗೊಳಿಸಿ ಆರೋಪಿಗಳ ಜಾಡು ಪತ್ತೆಹಚ್ಚಿದ್ದಾರೆ. ಹರೀಶ್ ಪಾಟೀಲ್ ನೇತೃತ್ವದ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿ, ಆರೋಪಿಗಳಿಂದ 558 ಗ್ರಾಂ ಚಿನ್ನಾಭರಣ ಹಾಗೂ ₹20 ಲಕ್ಷ ನಗದು ಸೇರಿದಂತೆ ಒಟ್ಟು ₹1.02 ಕೋಟಿ ಮೌಲ್ಯದ ಮಾಲನ್ನು ವಶಕ್ಕೆ ಪಡೆದಿದೆ.

ಕಳ್ಳತನದ ಬಳಿಕ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದ ಆರೋಪಿಗಳಿಗೆ ಕೊನೆಗೂ ಬಲೆ ಬೀಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣದ ಹಿನ್ನೆಲೆ, ಆರೋಪಿಗಳ ಸಂಪರ್ಕ ಹಾಗೂ ಇನ್ನಷ್ಟು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆಯೇ ಎಂಬುದರ ಕುರಿತು ತನಿಖೆ ಮುಂದುವರಿದಿದೆ.