ಶಿವಮೊಗ್ಗ:’ ಇಲ್ಲಿನ ಗೋವಿಂದಾಪುರ ಮತ್ತು ಗೋಪಿಶೆಟ್ಟಿಕೊಪ್ಪದಲ್ಲಿ ಆಶ್ರಯ ಯೋಜನೆಯಡಿ ನಿರ್ಮಿಸುತ್ತಿರುವ ಮನೆಗಳನ್ನು ಶೀಘ್ರ ಪೂರ್ಣಗೊಳಿಸಿ ಫಲಾನುಭವಿಗಳಿಗೆ ವಿತರಿಸುವಂತೆ ಆಗ್ರಹಿಸಿ ಅ. 27ರಂದು ಮಹಾನಗರ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಲಾಗುವುದು’ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರಭಕ್ತರ ಬಳಗದ ನೇತೃತ್ವದಲ್ಲಿ ಅಂದು ಬೆಳಿಗ್ಗೆ 10 ಗಂಟೆಗೆ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದೆ. ಗಾಂಧಿ ಬಜಾರ್, ಶಿವಪ್ಪ ನಾಯಕ ವೃತ್ತ ಹಾಗೂ ಎನ್.ಡಿ.ವಿ. ಹಾಸ್ಟೆಲ್ ರಸ್ತೆ ಮೂಲಕ ಪಾಲಿಕೆ ಆವರಣ ತಲುಪಲಿದೆ ಎಂದರು.

2017ರಲ್ಲಿ ಆರಂಭವಾದ ಯೋಜನೆಯಡಿ ಗೋವಿಂದಾಪುರದಲ್ಲಿ 3,000 ಹಾಗೂ ಗೋಪಿಶೆಟ್ಟಿಕೊಪ್ಪದಲ್ಲಿ 1,300 ಮನೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿತ್ತು. ಆದರೆ, ಒಂಬತ್ತು ವರ್ಷ ಕಳೆದರೂ ಈವರೆಗೆ ಕೇವಲ 463 ಮನೆಗಳನ್ನು ಮಾತ್ರ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದೆ. ಬಡ ಕೂಲಿ ಕಾರ್ಮಿಕರು ಸಾಲ ಮಾಡಿ, ಚಿನ್ನಾಭರಣ ಹಾಗೂ ಮಂಗಳಸೂತ್ರ ಅಡಮಾನವಿಟ್ಟು ತಲಾ ₹80 ಸಾವಿರ ಪಾವತಿಸಿದ್ದರೂ ಮನೆ ಸಿಕ್ಕಿಲ್ಲ ಎಂದು ಹೇಳಿದರು.

ಗೋವಿಂದಾಪುರದಲ್ಲಿ ಕಾಮಗಾರಿ ಗುತ್ತಿಗೆ ಪಡೆದಿರುವ ನಾಗಾರ್ಜುನ ಕನ್ಸ್ಟ್ರಕ್ಷನ್ಗೆ ಸರ್ಕಾರದಿಂದ ₹15 ಕೋಟಿ ಬಾಕಿ ಇರುವುದರಿಂದ ನಿರ್ಮಾಣ ಕಾರ್ಯ ಸ್ಥಗಿತಗೊಂಡಿದೆ. ಗುತ್ತಿಗೆದಾರರು ಯಂತ್ರೋಪಕರಣ ಹಾಗೂ ಕಾರ್ಮಿಕರನ್ನು ಸ್ಥಳದಿಂದ ತೆರವುಗೊಳಿಸಿದ್ದಾರೆ. ಗೋಪಿಶೆಟ್ಟಿಕೊಪ್ಪದ ಕಾಮಗಾರಿಯ ಪ್ರಗತಿಯ ಬಗ್ಗೆಯೂ ರಾಜೀವ್ ಗಾಂಧಿ ವಸತಿ ನಿಗಮದ ಅಧಿಕಾರಿಗಳು ಸಮರ್ಪಕ ಮಾಹಿತಿ ನೀಡುತ್ತಿಲ್ಲ ಎಂದು ಆರೋಪಿಸಿದರು.

2024ರ ಜುಲೈ 18ರಂದು ರಾಷ್ಟ್ರಭಕ್ತರ ಬಳಗದ ವತಿಯಿಂದ ಪ್ರತಿಭಟನೆ ನಡೆಸಿ ಧರಣಿ ಸತ್ಯಾಗ್ರಹ ಕೈಗೊಂಡಾಗ, ಎರಡು ತಿಂಗಳಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದರು. ವಸತಿ ಸಚಿವ ಜಮೀರ್ ಅಹಮದ್ ಖಾನ್ ಕೂಡ ಅಗತ್ಯ ಹಣ ಬಿಡುಗಡೆ ಮಾಡುವುದಾಗಿ ತಿಳಿಸಿದ್ದರು. ಆದರೆ, ಈವರೆಗೆ ಹಣ ಬಿಡುಗಡೆಯಾಗದೆ ಕಾಮಗಾರಿ ಸ್ಥಗಿತಗೊಂಡಿದೆ. ಮನೆಗಾಗಿ ಹಣ ಪಾವತಿಸಿದ ಬಡವರು ಸೂರೂ ಇಲ್ಲದೆ, ಕಟ್ಟಿದ ಸಾಲಕ್ಕೆ ಬಡ್ಡಿ ಪಾವತಿಸುವಂತಾಗಿದೆ ಎಂದು ದೂರಿದರು.

ಸ್ಥಗಿತಗೊಂಡಿರುವ ಕಾಮಗಾರಿಗಳನ್ನು ಪುನರಾರಂಭಿಸಿ ಮನೆಗಳನ್ನು ಶೀಘ್ರ ಫಲಾನುಭವಿಗಳಿಗೆ ವಿತರಿಸಬೇಕು. ಬಡವರ ಸ್ವಂತ ಮನೆಯ ಕನಸನ್ನು ನನಸು ಮಾಡಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರಾಷ್ಟ್ರ ಭಕ್ತ ಬಳಗದ ಈ. ವಿಶ್ವಾಸ, ಮೋಹನ್ ಜಾದವ್,ಶಂಕರ್ ನಾಯ್ಕ್, ಶಿವಾಜಿ, ಬಾಲು ಇದ್ದರು.
————————