ಶಿವಮೊಗ್ಗ, ಅ.19(: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿಯ ಪಂಚ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯ 33ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಎಲ್ಲಾ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಡಿ.ಬಿ.ಟಿ. ಮೂಲಕ ತಲಾ 2,000 ರೂಪಾಯಿ

ಜಮೆ ಮಾಡಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಸಿ.ಎಸ್. ಚಂದ್ರಭೂಪಾಲ ತಿಳಿಸಿದ್ದಾರೆ.

ಮಹಿಳೆಯರ ಆರ್ಥಿಕ ಸ್ವಾತಂತ್ರ್ಯ ಮತ್ತು ಸಬಲೀಕರಣವನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರ ಈ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ. ಇಲ್ಲಿಯವರೆಗೆ 32 ಕಂತುಗಳಲ್ಲಿ ಫಲಾನುಭವಿಗಳ ಖಾತೆಗೆ ತಲಾ ಎರಡು ಸಾವಿರ ರೂಪಾಯಿಗಳಂತೆ ಒಟ್ಟು ರೂ. 64 ಸಾವಿರ ರೂಪಾಯಿಗಳು ಪಾವತಿಯಾಗಿವೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಪ್ರಸ್ತುತ 33ನೇ ಕಂತಿನಲ್ಲಿ ಶಿವಮೊಗ್ಗ ಜಿಲ್ಲೆಯ ಒಟ್ಟು 3,78,031 ಅರ್ಹ ಮಹಿಳಾ ಫಲಾನುಭವಿಗಳಿಗೆ

ಒಟ್ಟು ರೂ. 75,60,62,000 (ರೂ. 75.60 ಕೋಟಿ) ಹಣ ಸಂದಾಯವಾಗಿದೆ. ಸರ್ಕಾರದ ಈ ಸಕಾಲಿಕ ಸಹಾಯದಿಂದ ದಸರಾ ಹಬ್ಬದ ಸಂಭ್ರಮದಲ್ಲಿರುವ ಮನೆ ಒಡತಿಯರಿಗೆ ಆರ್ಥಿಕವಾಗಿ ಹೆಚ್ಚಿನ ನೆರವಾಗಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.