ಶಿವಮೊಗ್ಗ: ಆಶ್ರಯ ಯೋಜನೆಯಡಿ ಮನೆಗಳ ನಿರ್ಮಾಣ ಹಾಗೂ ಫಲಾನುಭವಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಆದಷ್ಟು ಬೇಗ ಪರಿಹಾರ ಒದಗಿಸಲಾಗುವುದು. ರಾಜ್ಯದಲ್ಲಿ ಬರ ನಿರ್ವಹಣೆ ಕುರಿತು ಅ.29ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ಆಶ್ರಯ ಯೋಜನೆಯ ವಿಚಾರವಾಗಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರೊಂದಿಗೆ ಮಾತನಾಡಿದ್ದೇನೆ ಎಂದ ಅವರು ಈ ವಿಷಯದಲ್ಲಿ ಕೆ.ಎಸ್. ಈಶ್ವರಪ್ಪ ಅವರು ಸಾಕಷ್ಟು ಕಷ್ಟಪಟ್ಟಿದ್ದಾರೆ. ಆಶ್ರಯ ಯೋಜನೆಗೆ ಸಂಬಂಧಿಸಿದಂತೆ ಉಂಟಾಗಿರುವ ಸಮಸ್ಯೆಗಳಿಗೆ ಸರ್ಕಾರದಿಂದ ಆದಷ್ಟು ಬೇಗ ಪರಿಹಾರ ಕಲ್ಪಿಸಲಾಗುವುದು ಎಂದು ಹೇಳಿದರು.

ಗುತ್ತಿಗೆದಾರರು ಕಾಮಗಾರಿಗಳನ್ನು ಪೂರ್ಣಗೊಳಿಸಲು ಹೆಚ್ಚುವರಿ ಕಾಲಾವಕಾಶ ಪಡೆದುಕೊಂಡಿರುವುದು ಸರ್ಕಾರದ ತಪ್ಪಲ್ಲ ಎಂದು ಅವರು ಅಭಿಪ್ರಾಯಪಟ್ಟರು. ಯೋಜನೆಯಡಿ ಕೈಗೆತ್ತಿಕೊಂಡಿರುವ ಕಾಮಗಾರಿಗಳು ಸಂಪೂರ್ಣವಾಗಿ ಪೂರ್ಣಗೊಳ್ಳಲಿವೆ ಎಂದು ಭರವಸೆ ನೀಡಿದರು.

ಬರ ನಿರ್ವಹಣೆಯ ವಿಚಾರದಲ್ಲಿ ಕೇಂದ್ರ ಸರ್ಕಾರವೂ ಹೆಚ್ಚಿನ ಆಸಕ್ತಿ ವಹಿಸಬೇಕು. ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಮತ್ತು ಬೇಡಿಕೆಯ ನಡುವಿನ ಪರಿಸ್ಥಿತಿಯ ಕುರಿತು ಮಾತನಾಡಿದ ಸಚಿವರು, ವಿದ್ಯುತ್ ಹಾಗೂ ಜಲವಿದ್ಯುತ್ ಉತ್ಪಾದನೆಯಲ್ಲಿ ವ್ಯತ್ಯಾಸ ಉಂಟಾಗುವ ಸಾಧ್ಯತೆಯಿದೆ ಎಂದು ತಿಳಿಸಿದರು.

ಸೌರ ವಿದ್ಯುತ್ ಬಳಕೆ ಹೆಚ್ಚಾಗಿದ್ದರೂ, ವಿದ್ಯುತ್ ಬೇಡಿಕೆಯೂ ಗಣನೀಯವಾಗಿ ಹೆಚ್ಚಾಗಿದೆ ಎಂದು ಹೇಳಿದರು. ಬರ ಪರಿಸ್ಥಿತಿಯಲ್ಲಿ ರೈತರಿಗೆ ವಿದ್ಯುತ್ ಪೂರೈಕೆ ಸೇರಿದಂತೆ ಎದುರಾಗಬಹುದಾದ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ಇದೇ ವೇಳೆ, ಕ್ಷೇತ್ರದ ಪರಿಸ್ಥಿತಿಯ ಕುರಿತು ಮಾಹಿತಿ ಸಂಗ್ರಹಿಸಲು ತಹಶೀಲ್ದಾರರೊಂದಿಗೆ ಸಭೆ ನಡೆಸಿ ಸ್ಥಳೀಯ ಮಟ್ಟದ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆಯಲಾಗುವುದು ಎಂದು ತಿಳಿಸಿದರು.