ಸಾಗರ: ಯುವಜನರನ್ನು ಸಬಲೀಕರಣಗೊಳಿಸಿದಾಗ ಮಾತ್ರ ಅಭಿವೃದ್ಧಿ ಹೊಂದಿದ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಹೇಳಿದರು.

ನಗರದ ಎಲ್.ಬಿ. ಮತ್ತು ಎಸ್.ಬಿ.ಎಸ್. ಕಾಲೇಜಿನ ದೇವರಾಜ ಅರಸು ಕಲಾಕ್ಷೇತ್ರದಲ್ಲಿ ಗುರುವಾರ ಆಯೋಜಿಸಿದ್ದ ‘ಅಭಿವೃದ್ಧಿ ಹೊಂದಿದ ರಾಷ್ಟ್ರಕ್ಕಾಗಿ ಯುವಜನರ ಸಬಲೀಕರಣ: ವ್ಯಸನದಿಂದ ಮಹತ್ವಾಕಾಂಕ್ಷೆಯತ್ತ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ಯುವಜನರು ಮಾದಕ ವ್ಯಸನದಂತಹ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಕಳವಳಕಾರಿ ಸಂಗತಿ. ಯುವಜನರಲ್ಲಿ ಜಾಗೃತಿ ಮೂಡಿಸಲು ಪೊಲೀಸ್ ಇಲಾಖೆ ಮತ್ತು ಶಿಕ್ಷಣ ಸಂಸ್ಥೆಗಳು ಜಂಟಿಯಾಗಿ ಹೆಚ್ಚಿನ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಸಲಹೆ ನೀಡಿದರು.

ಮುಖ್ಯ ಅತಿಥಿಯಾಗಿ ಮಾತನಾಡಿದ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಬಿ.ಆರ್. ಜಯಂತ್, ಯುವಜನರನ್ನು ವ್ಯಸನದಿಂದ ದೂರವಿರಿಸಿ ಮಹತ್ವಾಕಾಂಕ್ಷೆಯತ್ತ ಕೊಂಡೊಯ್ಯಬೇಕಿದೆ. ವ್ಯಸನಮುಕ್ತ ಸಮಾಜ ನಿರ್ಮಾಣವಾದಾಗ ಮಾತ್ರ ಅಭಿವೃದ್ಧಿ ಹೊಂದಿದ ಭಾರತದ ಕನಸು ನನಸಾಗಲು ಸಾಧ್ಯ. ಈ ನಿಟ್ಟಿನಲ್ಲಿ ಪ್ರತಿಷ್ಠಾನ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.

ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ, ಜೆಸಿಐ ವಲಯ–24ರ ಅಧ್ಯಕ್ಷ ಜೆಎಫ್ಎಸ್ ಸಿಎ ಮಧುಸೂದನ್ ನಾವಡ, ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಡಾ. ಎಚ್.ಎಂ. ಶಿವಕುಮಾರ್, ವಿಶ್ವ ಯುವಕ ಕೇಂದ್ರದ ಮಂಜುನಾಥ್ ಕೆ., ನಿವೃತ್ತ ಪ್ರಾಂಶುಪಾಲ ಪ್ರೊ. ಎಂ.ಸಿ. ಕೋಮಲ ಉಪಸ್ಥಿತರಿದ್ದರು.
ಚೈತನ್ಯ ಸಂಸ್ಥೆಯ ಕಾರ್ಯದರ್ಶಿ ಜಿ.ಸಿ. ಭದ್ರೇಶ್ ಬಿ. ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.