
ಶಿವಮೊಗ್ಗ: ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳನ್ನು ಎದುರಿಸಲು ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿಯೂ ಜೆಡಿಎಸ್ ಅಭ್ಯರ್ಥಿಗಳನ್ನು ಸಿದ್ಧಪಡಿಸಲಾಗುತ್ತಿದೆ. ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಈಗಿನಿಂದಲೇ ಚುನಾವಣೆಗೆ ಸಜ್ಜಾಗಬೇಕು ಎಂದು ಜೆಡಿಎಸ್ ಜಿಲ್ಲಾ ಘಟಕ ಅಧ್ಯಕ್ಷ ಕೆ.ಎನ್. ರಾಮಕೃಷ್ಣ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ಹಾಗೂ ಭದ್ರಾವತಿ ತಾಲ್ಲೂಕಿನಲ್ಲಿ ಈಗಾಗಲೇ ಅಭ್ಯರ್ಥಿಗಳ ಆಯ್ಕೆ ಅಂತಿಮ ಆಗಿದೆ. ತೀರ್ಥಹಳ್ಳಿ ಸೇರಿದಂತೆ ಪಕ್ಷದ ಸಂಘಟನೆ ಬಲವಾಗಿರುವ ಎಲ್ಲ ತಾಲ್ಲೂಕುಗಳಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಮುಖಂಡರು ಮತ್ತು ಕಾರ್ಯಕರ್ತರು ಚುನಾವಣಾ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ರಾಜ್ಯದಲ್ಲಿ ಜನವರಿಯಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸುವ ಸಾಧ್ಯತೆ ಇದೆ. ಇದನ್ನು ಗಮನದಲ್ಲಿಟ್ಟುಕೊಂಡು ಪಕ್ಷ ಸಂಘಟನೆ ಹಾಗೂ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.
ಹಾಲು ಮತ್ತು ಮೊಸರಿನ ದರವನ್ನು ಪದೇಪದೇ ಹೆಚ್ಚಿಸುವ ಮೂಲಕ ಸರ್ಕಾರ ಸಾರ್ವಜನಿಕರ ಮೇಲೆ ಆರ್ಥಿಕ ಹೊರೆ ಹೊರಿಸುತ್ತಿದೆ. ಹಾಲಿನ ದರವನ್ನು ಮೂರು ವರ್ಷಗಳಲ್ಲಿ ನಾಲ್ಕು ಬಾರಿ ಹೆಚ್ಚಿಸಲಾಗಿದ್ದು, ಮೊಸರಿನ ದರವೂ ₹12ರಿಂದ ₹14ರವರೆಗೆ ಏರಿಕೆಯಾಗಿದೆ. ಕೆಎಸ್ಆರ್ಟಿಸಿ ಬಸ್ ದರ ಶೇ 23 ಮತ್ತು ಬಿಎಂಟಿಸಿ ದರ ಶೇ 35ರಷ್ಟು ಹೆಚ್ಚಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ₹2,000 ನೀಡುವ ಸರ್ಕಾರ, ಮತ್ತೊಂದೆಡೆ ಬೆಲೆ ಏರಿಕೆ ಮೂಲಕ ಜನರಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳ ಸೌಲಭ್ಯವೂ ಸಮರ್ಪಕವಾಗಿ ತಲುಪುತ್ತಿಲ್ಲ. ಸರ್ಕಾರದ ಸಾಲದ ಹೊರೆ ಅಂತಿಮವಾಗಿ ನಾಗರಿಕರ ಮೇಲೆ ಬೀಳಲಿದೆ ಎಂದು ಆರೋಪಿಸಿದರು.

ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಮಾತನಾಡಿ, ರೈತರ ಹೆಸರಿನಲ್ಲಿ ಹಾಲಿನ ದರವನ್ನು ಲೀಟರ್ಗೆ ₹8 ಹೆಚ್ಚಿಸಿರುವ ರಾಜ್ಯ ಸರ್ಕಾರ, ಬಸ್ ಪ್ರಯಾಣ ದರವನ್ನು ಏರಿಸಿ ಜನರ ಮೇಲೆ ಆರ್ಥಿಕ ಹೊರೆ ಹೊರಿಸುತ್ತಿದೆ ಎಂದು ಆರೋಪಿಸಿದರು.
ಹಾಲಿನ ದರ ಹೆಚ್ಚಳದಿಂದ ಮೊಸರು, ಬೆಣ್ಣೆ, ತುಪ್ಪ ಸೇರಿದಂತೆ ಉತ್ಪನ್ನಗಳ ಬೆಲೆಯೂ ₹12ರಿಂದ ₹14ರವರೆಗೆ ಏರಿಕೆಯಾಗಿದೆ. ರೈತರಿಗೆ ನೆರವು ನೀಡುವುದು ಸರ್ಕಾರದ ಜವಾಬ್ದಾರಿ. ಅದಕ್ಕಾಗಿ ಗ್ರಾಹಕರ ಮೇಲೆ ಹೊರೆ ಹಾಕುವುದು ಸರಿಯಲ್ಲ ಎಂದರು.

ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಒಂದು ಕೈಯಲ್ಲಿ ಹಣ ನೀಡಿ, ಮತ್ತೊಂದು ಕೈಯಲ್ಲಿ ಬೆಲೆ ಏರಿಕೆ, ತೆರಿಗೆ ಹಾಗೂ ದಂಡಗಳ ಮೂಲಕ ಜನರಿಂದ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ. ಗ್ಯಾರಂಟಿ ಯೋಜನೆಗಳ ರದ್ದತಿ ನಮ್ಮ ಬೇಡಿಕೆಯಲ್ಲ. ಜನರ ಆರ್ಥಿಕ ಸ್ಥಿತಿಗೆ ಅನುಗುಣವಾಗಿ ಜವಾಬ್ದಾರಿಯುತ ಆಡಳಿತ ನಡೆಸಬೇಕು ಎಂದರು.
ಜೆಡಿಎಸ್ ಮಾಜಿ ಅಧ್ಯಕ್ಷ ಕಡಿದಾಳ್ ಗೋಪಾಲ್, ಉಪಾಧ್ಯಕ್ಷ ತಿಪ್ಪೇಸ್ವಾಮಿ, ಪ್ರಧಾನ ಕಾರ್ಯದರ್ಶಿ ಹೆಚ್. ಎಂ. ಸಂಗಯ್ಯ, ನಗರದ ಅಧ್ಯಕ್ಷ ದೀಪಕ್ ಸಿಂಗ್, ಕಾರ್ಯಾಧ್ಯಕ್ಷರಾದ ದಾದಾಫೀರ್, ನರಸಿಂಹ ಗಂಧದ ಮನೆ, ಮಹಿಳಾ ವಿಭಾಗದ ಅಧ್ಯಕ್ಷೆ ಗೀತಾ ಸತೀಶ್, ತ್ಯಾಗರಾಜ್, ಅಬ್ದುಲ್ ವಾಜಿದ್ ಇದ್ದರು.
ಚುನಾವಣೆವರೆಗೂ ಬಿಜೆಪಿ–ಜೆಡಿಎಸ್ ಮೈತ್ರಿ ಮುಂದುವರಿಕೆ: ಕೆ.ಬಿ. ಪ್ರಸನ್ನ ಕುಮಾರ್
ಬಿಜೆಪಿ ಮತ್ತು ಜೆಡಿಎಸ್ ನಡುವಿನ ಮೈತ್ರಿ ಸಂಬಂಧ ಗಟ್ಟಿಯಾಗಿದೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಬರುವವರೆಗೂ ಮೈತ್ರಿ ಮುಂದುವರಿಯಲಿದೆ. ಚುನಾವಣೆಯ ನಂತರದ ಬೆಳವಣಿಗೆಗಳು ಹಾಗೂ ಮುಂದಿನ ನಿರ್ಧಾರವನ್ನು ಪಕ್ಷದ ವರಿಷ್ಠರು ಕೈಗೊಳ್ಳಲಿದ್ದಾರೆ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಹೇಳಿದರು.ಎರಡೂ ಪಕ್ಷಗಳು ತಮ್ಮದೇ ಆದ ಹೋರಾಟಗಳನ್ನು ಪ್ರತ್ಯೇಕವಾಗಿ ನಡೆಸುತ್ತಿವೆ. ಇಲ್ಲಿ ಹೋರಾಟದಲ್ಲಿ ಮೈತ್ರಿ ಇರುವುದಿಲ್ಲ. ಚುನಾವಣೆಯಲ್ಲಿ ಮಾತ್ರ ಮೈತ್ರಿ ಮುಂದುವರಿಯಲಿದೆ. ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಜೆಡಿಎಸ್ ಎಲ್ಲ ಕ್ಷೇತ್ರಗಳಲ್ಲೂ ಸ್ಪರ್ಧಿಸಲು ಆಕಾಂಕ್ಷಿಗಳಿದ್ದಾರೆ. ಈಗಾಗಲೇ ಹಲವು ಮುಖಂಡರು ಟಿಕೆಟ್ ಕೇಳುತ್ತಿದ್ದಾರೆ. ಈ ಕುರಿತ ರಾಜ್ಯಾಧ್ಯಕ್ಷರೊಂದಿಗೆ ಚರ್ಚಿಸಲಾಗುವುದು. ಮೈತ್ರಿ ಮತ್ತು ಕ್ಷೇತ್ರಗಳ ಹಂಚಿಕೆ ಬಗ್ಗೆ ವರಿಷ್ಠರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.