ಶಿವಮೊಗ್ಗ : ಜಮೀನು ಮಂಜೂರಾತಿಗಾಗಿ ಅಧಿಕಾರಿಗಳು ಹಣ ಪಡೆದರೂ ಕೆಲಸ ಮಾಡಿಕೊಡುತ್ತಿಲ್ಲ ಎಂದು ಆರೋಪಿಸಿ ರೈತರೊಬ್ಬರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲೇ ಮರವೇರಿ ಪ್ರತಿಭಟನೆ ನಡೆಸಿದ ಘಟನೆ ಬುಧವಾರ ನಡೆದಿದೆ.

ಶಿವಮೊಗ್ಗ ತಾಲೂಕಿನ ರಾಮೀನಕೊಪ್ಪ ಗ್ರಾಮದ ರೈತ ನಾಗರಾಜ್ ಮರವೇರಿ ಪ್ರತಿಭಟನೆ ನಡೆಸಿದವರು. ಜಮೀನು ಮಂಜೂರಾತಿ ಮಾಡಿಕೊಡುವುದಾಗಿ ತಹಶೀಲ್ದಾರ್ ಹಣ ಪಡೆದಿದ್ದಾರೆ. ಆದರೆ ಹಣ ಪಡೆದರೂ ಕೆಲಸ ಮಾಡಿಕೊಡದೆ ಸತಾಯಿಸುತ್ತಿದ್ದಾರೆ ಎಂದು ನಾಗರಾಜ್ ಗಂಭೀರ ಆರೋಪ ಮಾಡಿದ್ದಾರೆ.

ಅಧಿಕಾರಿಗಳ ವರ್ತನೆಯಿಂದ ಬೇಸತ್ತ ನಾಗರಾಜ್ ಮರ ಏರಿ ಆಕ್ರೋಶ ವ್ಯಕ್ತಪಡಿಸಿದ್ದು, ಅವರ ಕುಟುಂಬದ 12 ಮಂದಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಿ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.

ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ಮುಂದಾದರು. ಅಗ್ನಿಶಾಮಕ ದಳದ ಸಿಬ್ಬಂದಿಯೂ ಸ್ಥಳಕ್ಕೆ ಆಗಮಿಸಿ ಮರವೇರಿದ್ದ ನಾಗರಾಜ್ ಅವರನ್ನು ಸುರಕ್ಷಿತವಾಗಿ ಕೆಳಗಿಳಿಸಲು ಹರಸಾಹಸಪಟ್ಟರು.

ತಕ್ಷಣವೇ ಜಮೀನು ಮಂಜೂರು ಮಾಡಬೇಕು ಹಾಗೂ ಲಂಚದ ಆರೋಪ ಎದುರಿಸುತ್ತಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.