ತಾಲೂಕಿಗೆ ನಾಲ್ಕು ಕೆಪಿಎಸ್ ಶಾಲೆ ಮಂಜೂರು
ಆನಂದಪುರ : ನಾನೇನಾದರೂ ಮುಖ್ಯಮಂತ್ರಿಯಾಗಿದ್ದರೆ ಮಕ್ಕಳನ್ನು ಶಾಲೆಗೆ ಕಳುಹಿಸದ ಪೋಷಕರನ್ನು ಜೈಲಿಗೆ ಹಾಕುವ ವ್ಯವಸ್ಥೆ ಮಾಡುತ್ತಿದ್ದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಆನಂದಪುರದ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ಗುರುವಾರ ನಡೆದ ಪ್ರೌಢಶಾಲಾ ವಿಭಾಗದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, “. ಯಾವುದೇ ಕಾರಣಕ್ಕೂ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ನಾನೇನಾದರೂ ಮುಖ್ಯಮಂತ್ರಿಯಾಗಿದ್ದರೆ ಮಕ್ಕಳನ್ನು ಶಾಲೆಗೆ ಕಳುಹಿಸದ ಪೋಷಕರನ್ನು ಜೈಲಿಗೆ ಹಾಕುವ ವ್ಯವಸ್ಥೆ ಮಾಡುತ್ತಿದ್ದೆ.” ಈಗ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮತ್ತೆ ಶಿಕ್ಷಣದ ಮುಖ್ಯವಾಹಿನಿಗೆ ಕರೆತರುವವರಿಗೆ ₹10 ಸಾವಿರ ಬಹುಮಾನ ನೀಡುವುದಾಗಿ ತಿಳಿಸಿದರು.

ಪ್ರತಿಭಾ ಕಾರಂಜಿ ಮತ್ತು ಕ್ರೀಡಾಕೂಟಗಳು ಮಕ್ಕಳ ಮಾನಸಿಕ ಒತ್ತಡವನ್ನು ಕಡಿಮೆ ಮಾಡುವುದರೊಂದಿಗೆ ಅವರಲ್ಲಿನ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸಲು ಸಹಕಾರಿಯಾಗುತ್ತವೆ. ಶಿಕ್ಷಣದ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳೂ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅಗತ್ಯವಾಗಿವೆ ಎಂದರು.
ಆಧುನಿಕತೆಯ ಪ್ರಭಾವದಿಂದ ಪೋಷಕರಲ್ಲಿ ಖಾಸಗಿ ಶಾಲೆಗಳ ಮೇಲಿನ ವ್ಯಾಮೋಹ ಹೆಚ್ಚಾಗಿದ್ದರೂ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ. ಮೆರಿಟ್ ಆಧಾರದ ಮೇಲೆ ಆಯ್ಕೆಯಾದ ಸಮರ್ಥ ಶಿಕ್ಷಕರು ಸರ್ಕಾರಿ ಶಾಲೆಗಳಲ್ಲಿದ್ದು, ಪೋಷಕರು ಸರ್ಕಾರಿ ಶಾಲೆಗಳ ಮೇಲೆಯೂ ವಿಶ್ವಾಸವಿಡಬೇಕು ಎಂದು ಹೇಳಿದರು.

Box:ತಾಲೂಕಿನ ತ್ಯಾಗರ್ತಿ, ಸಿರಿವಂತೆ, ಮಾಸೂರು ಮತ್ತು ಬ್ರಾಕೋಡು ಗ್ರಾಮಗಳಲ್ಲಿ ನಾಲ್ಕು ಕರ್ನಾಟಕ ಪಬ್ಲಿಕ್ ಸ್ಕೂಲ್ಗಳನ್ನು ಮಂಜೂರು ಮಾಡಲಾಗಿದೆ. ಇದಕ್ಕೆ ಅಗತ್ಯ ಅನುದಾನವೂ ಬಿಡುಗಡೆಯಾಗಿದ್ದು, ಖಾಸಗಿ ಶಾಲೆಗಳಿಗೆ ಕಡಿಮೆಯಿಲ್ಲದಂತೆ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುವುದು. ಮಕ್ಕಳ ಅನುಕೂಲಕ್ಕಾಗಿ ಬಸ್ ವ್ಯವಸ್ಥೆಯನ್ನೂ ಕಲ್ಪಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ರಮೇಶ್, ಕೆಪಿಎಸ್ ಪ್ರಾಂಶುಪಾಲರಾದ ರವಿಶಂಕರ್, ಈಶ್ವರಪ್ಪ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ರಂಗನಾಥ್, ರಾಜ್ಯ ಪಶ್ಚಿಮ ಘಟ್ಟ ಸಂರಕ್ಷಣಾ ಪಡೆಯ ನಿರ್ದೇಶಕ ಲಿಂಗರಾಜ್, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಾಗರ ಶಾಖೆಯ ಅಧ್ಯಕ್ಷ ಲಕ್ಷ್ಮಣ್, ಶಿಕ್ಷಣಾಧಿಕಾರಿಗಳ ಸಂಘದ ಸಾಸಾಗರ ಅಧ್ಯಕ್ಷ ಓಂಕಾರಪ್ಪ, ಮಹಾಬಲೇಶ್ವರ, ಮಂಜಪ್ಪ, ಶಾಲಾಭಿವೃದ್ಧಿ ಸಮಿತಿಯ ಉಮೇಶ್, ಜಗನ್ನಾಥ್, ಚೇತನ್ ರಾಜ್ ಕಣ್ಣೂರು, ರಮಾನಂದ, ರಜಾಕ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.