ಶಿವಮೊಗ್ಗ: ಸರಳ ನಡೆ-ನುಡಿ, ಆಡಳಿತ ದಕ್ಷತೆ ಹಾಗೂ ಮೌಲ್ಯಾಧಾರಿತ ರಾಜಕಾರಣದ ಮೂಲಕ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪೂರ್ಯಾನಾಯ್ಕ್ ಅವರು ಜನಪ್ರತಿನಿಧಿಯಾಗಿ ಮಾದರಿಯಾಗಿದ್ದಾರೆ ಎಂದು ಜೆಡಿಎಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾ ಸತೀಶ್ ಹೇಳಿದರು.


ಭದ್ರಾವತಿ ತಾಲೂಕಿನ ಆನವೇರಿ ಗ್ರಾಮದ ಹಿರಿಮಾವುರದಮ್ಮ ದೇವಸ್ಥಾನದಲ್ಲಿ ಭಾನುವಾರ ಶಾಸಕಿ ಶಾರದಾ ಪೂರ್ಯಾನಾಯ್ಕ್ ಅವರ ಜನ್ಮದಿನದ ಅಂಗವಾಗಿ ಶಿವಮೊಗ್ಗ ಗ್ರಾಮಾಂತರ ಜೆಡಿಎಸ್ ಕಾರ್ಯಕರ್ತರು ಆಯೋಜಿಸಿದ್ದ ರಕ್ತದಾನ ಶಿಬಿರ ಹಾಗೂ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಅಧಿಕಾರದ ಆಸೆಗಾಗಿ ರಾಜಕಾರಣ ಮಾಡದೆ, ಸಮಾಜದ ಒಳಿತಿಗಾಗಿ ಪ್ರಾಮಾಣಿಕತೆ, ಸೇವಾ ಮನೋಭಾವ ಹಾಗೂ ಉನ್ನತ ಮೌಲ್ಯಗಳೊಂದಿಗೆ ಕಾರ್ಯನಿರ್ವಹಿಸುವ ನಾಯಕತ್ವ ಶಾಸಕರದ್ದಾಗಿದೆ. ಜನರ ಕಷ್ಟ-ಸುಖಗಳಿಗೆ ಸ್ಪಂದಿಸಿ, ಅಧಿಕಾರವನ್ನು ಸೇವೆಯ ಮಾಧ್ಯಮವಾಗಿ ಬಳಸಿಕೊಳ್ಳುವ ಅವರ ಗುಣ ಇತರರಿಗೆ ಅನುಕರಣೀಯವಾಗಿದೆ ಎಂದರು.

ಮುಂದಿನ ಚುನಾವಣೆಯನ್ನಷ್ಟೇ ಗಮನದಲ್ಲಿಟ್ಟುಕೊಳ್ಳದೆ, ಮುಂದಿನ ಪೀಳಿಗೆಯ ಭವಿಷ್ಯಕ್ಕಾಗಿ ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಶ್ರಮಿಸುವ ದೂರದೃಷ್ಟಿ ಶಾಸಕರಲ್ಲಿದೆ. ಜಾತಿ, ಮತ, ಧರ್ಮದ ಭೇದವಿಲ್ಲದೆ ಎಲ್ಲರನ್ನೂ ಸಮಾನವಾಗಿ ಕಾಣುವ ಅವರು, ಸಂವಿಧಾನದ ಆಶಯಗಳಿಗೆ ಬದ್ಧರಾಗಿದ್ದಾರೆ ಎಂದು ಹೇಳಿದರು.

ಶಾಸಕಿ ಶಾರದಾ ಪೂರ್ಯಾನಾಯ್ಕ್ ಮಾತನಾಡಿ, ಕ್ಷೇತ್ರದ ಜನತೆ ತೋರಿರುವ ಪ್ರೀತಿ, ವಿಶ್ವಾಸ ಹಾಗೂ ಆಶೀರ್ವಾದಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ನಿರೀಕ್ಷೆಗೂ ಮೀರಿದ ಜನಮನ್ನಣೆ ನೀಡಿದ ಮತದಾರರನ್ನು ಎಂದಿಗೂ ಮರೆಯುವುದಿಲ್ಲ. ಜನರು ತಮ್ಮನ್ನು ಮನೆಯ ಮಗಳಂತೆ ಕಾಣುತ್ತಿದ್ದು, ಕೊನೆಯುಸಿರಿನವರೆಗೂ ಜನತೆಗೆ ಆಭಾರಿಯಾಗಿರುತ್ತೇನೆ. ಚುನಾವಣೆಯಲ್ಲಿ ಪಕ್ಷಾತೀತವಾಗಿ ಸಹಕಾರ ನೀಡಿದವರನ್ನು ಮರೆಯಲು ಸಾಧ್ಯವಿಲ್ಲ ಎಂದರು.

2028ರಲ್ಲೂ ಗೆಲುವಿನ ವಿಶ್ವಾಸ
2028ರ ವಿಧಾನಸಭಾ ಚುನಾವಣೆಯಲ್ಲಿ ಶಾರದಾ ಅವರ ಗೆಲುವು ನಿಶ್ಚಿತವಾಗಿದ್ದು, ಮುಂದಿನ ಮೈತ್ರಿ ಸರ್ಕಾರದಲ್ಲಿ ಸಚಿವರಾಗಲಿದ್ದಾರೆ ಎಂದು ಕಾರ್ಯಕರ್ತರು ಘೋಷಣೆ ಕೂಗಿ ಅಭಿಮಾನ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕಿ, ಹಿರಿಮಾವುರದಮ್ಮ ದೇವಿ ಹಾಗೂ ಮತದಾರರ ಆಶೀರ್ವಾದವಿದ್ದರೆ ಎಲ್ಲವೂ ಸಾಧ್ಯ ಎಂದರು.

ರಕ್ತದಾನ ಮಾಡಿದವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಜೆಡಿಎಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾ ಸತೀಶ್ ಅವರು ನಾಲ್ಕನೇ ಬಾರಿ ರಕ್ತದಾನ ಮಾಡುವ ಮೂಲಕ ಮಾದರಿಯಾದರು.
ಭದ್ರಾವತಿ ಗ್ರಾಮಾಂತರ ಕ್ಷೇತ್ರದ ಕಾರ್ಯಾಧ್ಯಕ್ಷ ಸತೀಶ್ ಸಿದ್ಲೀಪುರ, ಸತೀಶ್ ಕಸೆಟ್ಟಿ, ಕುಮಾರ್ ನಾಯ್ಕ್, ಶಂಕರ, ನಿಶಾಂತ್, ಸತೀಶ್ ಪಿಳ್ಳಂಗಿರಿ, ಜಗದೀಶ್, ಪ್ರದೀಪ್ ಪುರದಾಳು, ನಿರ್ಮಲ ಮತ್ತಿತರರು ಉಪಸ್ಥಿತರಿದ್ದರು.